ಸಿಎಂ ಅಭ್ಯರ್ಥಿ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಡಿ, ಜಮೀರ್‌ಗೆ ಸುರ್ಜೇವಾಲ ಸೂಚನೆ?

0
3
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರವಾಗಿ ಚರ್ಚೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ, ಈ ಬಗ್ಗೆ ಚಕಾರ ಎತ್ತದಂತೆ ಚಾಮರಾಜಪೇಟೆ ಶಾಸಕ‌ ಜಮೀರ್ ಅಹ್ಮದ್ ಖಾನ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಮೀರ್ ಅಹಮದ್‌ ಖಾನ್‌ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಮುಂದಿನ ಸಿಎಂ ಎಂಬ ಹೇಳಿಕೆ ನೀಡುತ್ತಿದ್ದಾರೆ.‌ ಜಮೀರ್ ನಡೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರೋಕ್ಷವಾಗಿ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು.

“ಸಿಎಂ ಆಗಲು ನನಗೆ ಸೇರಿದಂತೆ ಸಿದ್ದರಾಮಯ್ಯ, ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆಗೂ ಆಸೆ ಇರಬಹುದು. ‌ಆದರೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮಂದೆ ಇರುವ ಗುರಿಯಾಗಿದೆ,” ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು.

ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೋಮವಾರ ಜಮೀರ್ ಅಹ್ಮದ್ ಖಾನ್ ಅವರಿಗೆ ಕರೆ ಮಾಡಿ ಸಿಎಂ‌ ಅಭ್ಯರ್ಥಿ ಯಾರು ಎಂಬ ಬಗ್ಗೆ ಯಾರೂ ಕೂಡಾ ಬಹಿರಂಗ ಹೇಳಿಕೆ ನೀಡಬಾರದು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.

LEAVE A REPLY

Please enter your comment!
Please enter your name here